May 30, 2026

ಹಡಪದ ಸಮಾಜದ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ ಅಗತ್ಯ: ನಿರುಪಾದಿ ಕೇಸರಹಟ್ಟಿ

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ : 19/05/2026

ಗಂಗಾವತಿ: ಹಡಪದ ಸಮಾಜ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸದೃಢಗೊಳ್ಳಬೇಕಾದರೆ ಸಮಾಜದ ಪ್ರತಿಯೊಬ್ಬರೂ ಒಂದಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಹಡಪದ ಸಮಾಜದ ಗಂಗಾವತಿ ತಾಲೂಕು ಅಧ್ಯಕ್ಷ ನಿರುಪಾದಿ ಕೇಸರಹಟ್ಟಿ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ಹಡಪದ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, “ನಮ್ಮ ಸಮಾಜ ಅತ್ಯಂತ ಹಿಂದುಳಿದ ಹಾಗೂ ಬಡತನದಲ್ಲಿರುವ ವರ್ಗವಾಗಿದೆ. ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವದಂತೆ ದುಡಿಮೆ ಮೂಲಕವೇ ಸಮಾಜದ ಪ್ರಗತಿ ಸಾಧ್ಯ” ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ನೋಂದಣಿ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸಮಾಜದ ಎಲ್ಲಾ ಕಾರ್ಮಿಕ ವರ್ಗದವರಿಗೆ ಕಾರ್ಡ್‌ಗಳನ್ನು ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ಕೊರತೆಯಿಂದ ಅನೇಕರು ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದ ಜನರಿಗೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸಮಾಜದ ಕಾರ್ಮಿಕರ ಆರೋಗ್ಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ನಡೆಸುವ ಜೊತೆಗೆ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಲು ಮತ್ತೊಂದು ಕಾರ್ಯಕ್ರಮವನ್ನು ಶೀಘ್ರದಲ್ಲೇ ಹಮ್ಮಿಕೊಳ್ಳಲಾಗುವುದು ಎಂದರು.

ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಶಿಕ್ಷಣದತ್ತ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರೋತ್ಸಾಹ ಧನ ವಿತರಿಸಲಾಗುವುದು. ಜೊತೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.

“ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಮೂಲಭೂತ ಸೌಲಭ್ಯಗಳು ತಲುಪುವಂತೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸಮಾಜದ ಏಳಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಮಂಜುನಾಥ ಕನಕಗಿರಿ, ಹೆಚ್. ಚಂದ್ರು ಕನಕಗಿರಿ, ಕಾರ್ಯದರ್ಶಿ ಶಿವಣ್ಣ ನೀಲಕಮ್ಮ, ಉಪಾಧ್ಯಕ್ಷ ಭೀಮನಗೌಡ, ಯುವ ಘಟಕ ಅಧ್ಯಕ್ಷ ವಿಕ್ರಮ ಪಾಟೀಲ್ ಹಾಗೂ ಮುಖಂಡರಾದ ಬದ್ರಿ ಹೆಚ್, ಮಹಾಂತೇಶ, ಚಂದ್ರಶೇಖರ, ಶರಣಬಸವ, ವೀರೇಶ, ಯಮನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

About The Author

error: Content is protected !!