October 16, 2026

ಗಂಗಾವತಿಯಲ್ಲಿ ಎರಡು ದಿನಗಳ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ : 22/05/2026

ಗಂಗಾವತಿ: ನಗರದ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಡಾ. ಆರ್.ಬಿ. ಪಾಟೀಲ್ ಫೌಂಡೇಶನ್, ಅಂಜನಾದ್ರಿ ಗೆಜ್ಜೆ ಹೆಜ್ಜೆ ಜನಸೇವಾ ಕಲಾ ಟ್ರಸ್ಟ್ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ Sapthagiri Hospital ವೈದ್ಯರ ನೇತೃತ್ವದಲ್ಲಿ ಮೇ 24 ಮತ್ತು 25ರಂದು ಎರಡು ದಿನಗಳ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಆರ್.ಬಿ. ಪಾಟೀಲ್ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಡಾ. ಆರ್.ಬಿ. ಪಾಟೀಲ್, ಅಂಜನಾದ್ರಿ ಗೆಜ್ಜೆ ಹೆಜ್ಜೆ ಜನಸೇವಾ ಕಲಾ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಇಂಗಳಗಿ ಹಾಗೂ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ್ ರಾಮಣ್ಣ ಗೋಪಾಲ ಅವರು, ನಗರದ ಭಗೀರಥ ಸರ್ಕಲ್‌ನ ಯಶೋಧ ಆಸ್ಪತ್ರೆ ಹಿಂಭಾಗದಲ್ಲಿರುವ ಶ್ರೀ ಸೀತಾರಾಮ ಆಂಜನೇಯ ದೇವಸ್ಥಾನದ ಆವರಣದಲ್ಲಿ ಶಿಬಿರ ನಡೆಯಲಿದೆ ಎಂದು ತಿಳಿಸಿದರು.

ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಶಿಬಿರದಲ್ಲಿ ರಕ್ತದ ಒತ್ತಡ, ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ತಪಾಸಣೆ, ನೇತ್ರ ತಪಾಸಣೆ, ಕ್ಯಾನ್ಸರ್ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಬೆನ್ನು ಹಾಗೂ ಕುತ್ತಿಗೆ ನೋವು, ನರ ಹಾಗೂ ಮೆದುಳು ಸಂಬಂಧಿತ ಕಾಯಿಲೆಗಳ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಉಚಿತವಾಗಿ ಲಭ್ಯವಿರಲಿವೆ ಎಂದರು.

ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದ ಅವರು, ಶಿಬಿರಕ್ಕೆ ಆಗಮಿಸುವವರು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಹಾಗೂ ಹಿಂದಿನ ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕೆಂದು ಮನವಿ ಮಾಡಿದರು.

ಪ್ರಸ್ತುತ ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚದ ನಡುವೆ ಬಡವರು, ಮಧ್ಯಮ ವರ್ಗದವರು, ಕಟ್ಟಡ ಕಾರ್ಮಿಕರು, ಕೃಷಿ ಕೂಲಿಕಾರರು ಹಾಗೂ ರೈತರಿಗೆ ನೆರವಾಗುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ನಿಯಮಿತ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಂಘಟಕರು ಕರೆ ನೀಡಿದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

error: Content is protected !!