August 21, 2026

“ಹಾಸ್ಟೆಲ್ ಆರಂಭದಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡನೀಯ: ಸಾವಿರಾರು ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ತಳ್ಳಿದ ಇಲಾಖೆ  ವಿರುದ್ಧ ಎಸ್‌ಎಫ್‌ಐ ಆಕ್ರೋಶ”

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ: 09/06/2026

ಗಂಗಾವತಿ: ಶಾಲಾ-ಕಾಲೇಜುಗಳು ಆರಂಭವಾಗಿ ತರಗತಿಗಳು ನಡೆಯುತ್ತಿದ್ದರೂ ವಿದ್ಯಾರ್ಥಿ ನಿಲಯಗಳನ್ನು ಇನ್ನೂ ಪ್ರಾರಂಭಿಸದ ಸರ್ಕಾರದ ಧೋರಣೆಯನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ರಾಜ್ಯ ಹಾಸ್ಟೆಲ್ ವಿದ್ಯಾರ್ಥಿಗಳ ಉಪಸಮಿತಿ ಹಾಗೂ ಗಂಗಾವತಿ ತಾಲೂಕು ಘಟಕದ ನೇತೃತ್ವದಲ್ಲಿ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಪತ್ರ
ಪ್ರತಿಭಟನೆಯ ಚಿತ್ರ

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಮೂಲಕ ಸಲ್ಲಿಸಲಾದ ಮನವಿಯಲ್ಲಿ, ವಿದ್ಯಾರ್ಥಿ ನಿಲಯಗಳ ಆರಂಭದಲ್ಲಿ ಉಂಟಾಗಿರುವ ವಿಳಂಬದಿಂದ ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿರುವುದನ್ನು ಸರ್ಕಾರದ ಗಮನಕ್ಕೆ ತರಲಾಯಿತು.

ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲಿಕಲ್ ಮಾತನಾಡಿ, 2026-27ನೇ ಶೈಕ್ಷಣಿಕ ವರ್ಷ ಆರಂಭವಾಗಿ ಹಲವು ದಿನಗಳು ಕಳೆದರೂ ಹಾಸ್ಟೆಲ್‌ಗಳನ್ನು ತೆರೆಯದೇ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ದೂರದ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಪ್ರತಿದಿನ ಹಣ ಖರ್ಚು ಮಾಡಿಕೊಂಡು ಕಾಲೇಜುಗಳಿಗೆ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲ ಪ್ರದೇಶಗಳಲ್ಲಿ ಬಸ್ ಸೌಲಭ್ಯವೂ ಇಲ್ಲದ ಕಾರಣ ಶಿಕ್ಷಣ ಮುಂದುವರಿಸುವುದೇ ಸವಾಲಾಗಿದೆ ಎಂದು ಹೇಳಿದರು.

ಎಸ್‌ಎಫ್‌ಐ ರಾಜ್ಯ ಸಹ ಸಂಚಾಲಕ ಷರೀಫ್ ಗಂಗಾವತಿ ಮಾತನಾಡಿ, ವಿವಿಧ ಇಲಾಖೆಗಳ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ತಕ್ಷಣ ಪ್ರಕಟಿಸಿ, ಅರ್ಹ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಶಿವಕುಮಾರ್ ಮಾತನಾಡಿ, ಹಾಸ್ಟೆಲ್ ಪ್ರವೇಶದಲ್ಲಿ ಮೆರಿಟ್ ಆಧಾರಿತ ಆಯ್ಕೆ ಪದ್ಧತಿಯನ್ನು ಕೈಬಿಟ್ಟು ಅರ್ಜಿ ಸಲ್ಲಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್‌ಗಳನ್ನು ಆರಂಭಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಶಿವಪ್ಪ ಅಂಬ್ಲಿಕಲ್, ರಾಜ್ಯ ಸಹ ಸಂಚಾಲಕ ಷರೀಫ್ ಗಂಗಾವತಿ, ಜಿಲ್ಲಾಧ್ಯಕ್ಷ ಶಿವಕುಮಾರ್, ತಾಲೂಕು ಅಧ್ಯಕ್ಷ ನಾಗರಾಜ ಯು. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್