🟥 ಟಿ ಪಬ್ಲಿಕ್ ನ್ಯೂಸ್ | ಬೆಂಗಳೂರು
ದಿನಾಂಕ: 16/06/2026
ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ–2022ರಡಿ ಪರಿಶಿಷ್ಟ ಜಾತಿಯವರಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.7ರಷ್ಟು ಹೆಚ್ಚಿಸಲಾದ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಮಹಾಸ್ವಾಮಿಗಳಾದ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಹೆಚ್ಚಿಸಲಾದ ಮೀಸಲಾತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಂದ ಉಂಟಾಗಿರುವ ತಾತ್ಕಾಲಿಕ ಅಡಚಣೆಯನ್ನು ನಿವಾರಿಸಲು ಸರ್ಕಾರವು ಸಮರ್ಥವಾಗಿ ವಾದ ಮಂಡಿಸಿ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಒತ್ತಾಯಿಸಿತು.
ಈ ನಿಟ್ಟಿನಲ್ಲಿ ಸರ್ಕಾರದ ಪರವಾಗಿ ಹಿರಿಯ ಕಾನೂನು ತಜ್ಞ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಿಸಿ, ಪರಿಶಿಷ್ಟ ಸಮುದಾಯಗಳ ಹಿತಾಸಕ್ತಿಯನ್ನು ನ್ಯಾಯಾಲಯದ ಮುಂದೆ ಪರಿಣಾಮಕಾರಿಯಾಗಿ ಪ್ರತಿಪಾದಿಸುವಂತೆ ಕೋರಲಾಯಿತು.
ಅಲ್ಲದೆ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವುದು ಹಾಗೂ ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕಾತಿಗಳಲ್ಲಿ ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ಕಲ್ಪಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಬಸನಗೌಡ ದದ್ದಲ್, ಟಿ. ರಘುಮೂರ್ತಿ, ಡಾ. ಎನ್.ಟಿ. ಶ್ರೀನಿವಾಸ್, ಜೆ.ಎನ್. ಗಣೇಶ್, ಬಿ. ದೇವೇಂದ್ರಪ್ಪ, ನಿವೃತ್ತ ಜಿಲ್ಲಾಧಿಕಾರಿಗಳಾದ ಬಿ. ಶಿವಪ್ಪ, ಕೆ.ಎಸ್. ಮೃತ್ಯುಂಜಯ, ಮಲ್ಲೇಶಪ್ಪ ಸೇರಿದಂತೆ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಭೇಟಿಯ ವೇಳೆ ಮುಖ್ಯಮಂತ್ರಿಗಳನ್ನು ಸಮುದಾಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ