🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 21/06/2026
ಗಂಗಾವತಿ: ಪ್ರತಿ ವರ್ಷದಂತೆ ಈ ಬಾರಿಯೂ ಗಂಗಾಮತ ಸಮಾಜದ ವತಿಯಿಂದ ಜೂನ್ 24ರಂದು ಹೊಸಳ್ಳಿ ಗ್ರಾಮದಲ್ಲಿ ಗಂಗಾದೇವಿ ಜಯಂತಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಗಂಗಾಮತ ಸಮಾಜದ ಅಧ್ಯಕ್ಷ ಸಿದ್ದಪ್ಪ ಕರೆಕುರಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಂಗಾದೇವಿ ಜಯಂತಿಯ 23ನೇ ವರ್ಷದ ಆಚರಣೆ ಹಾಗೂ 2ನೇ ವರ್ಷದ ರಥೋತ್ಸವ ಕಾರ್ಯಕ್ರಮಕ್ಕೆ ಸಮಾಜದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜೂನ್ 23ರಂದು ಗಂಗಾದೇವಿ ದೇವಸ್ಥಾನದಲ್ಲಿ ನೂತನ ಪಾದಗಟ್ಟೆ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಹೆಬ್ಬಾಳ ಮಠದ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿಗಳು ಹಾಗೂ ಕಲ್ಮಠದ ಕೊಟ್ಟೂರೇಶ್ವರ ಸ್ವಾಮೀಜಿಗಳು ಧಾರ್ಮಿಕ ವಿಧಿವಿಧಾನಗಳ ಮೂಲಕ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಜೂನ್ 24ರಂದು ನಡೆಯಲಿರುವ ಗಂಗಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾದೇವಿ ಪಾದಗಟ್ಟೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ದೇವಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿವೆ.
ಇದೇ ಸಂದರ್ಭದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವೂ ನಡೆಯಲಿದ್ದು, ಸಂಜೆ ನಡೆಯುವ ಗಂಗಾದೇವಿ ರಥೋತ್ಸವಕ್ಕೆ ಬಿಜೆಪಿ ಮುಖಂಡೆ ಜಿ. ಅರುಣಲಕ್ಷ್ಮಿ ಚಾಲನೆ ನೀಡಲಿದ್ದಾರೆ. ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಿದ್ದಪ್ಪ ಕರೆಕುರಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ಡಾಣಿ ಮರಿಯಪ್ಪ, ಕಾರ್ಯದರ್ಶಿ ಮೆಟ್ರಿ ಶ್ರೀನಿವಾಸ, ಸದಸ್ಯರಾದ ಪಿ. ಸಿದ್ದಪ್ಪ, ಬೋವಿ ಯಂಕಪ್ಪ, ಕುಂಟೋಜಿ ಹನುಮೇಶಪ್ಪ, ಚಂದ್ರಪ್ಪ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ