October 16, 2026

ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ವಿರುದ್ಧ ದಲಿತ ಸೇನೆ ಹೋರಾಟಕ್ಕೆ ಫಲ: ಶಿಕ್ಷಣ ಸಂಸ್ಥೆಗಳಿಗೆ ಬಿಇಒ ನೋಟಿಸ್

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 23/06/2026

ಗಂಗಾವತಿ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಅತಿಯಾದ ಡೊನೇಷನ್ ಹಾಗೂ ಮನಬಂದಂತೆ ಶುಲ್ಕ ವಸೂಲಾತಿ ವಿರುದ್ಧ ದಲಿತ ಸೇನೆ ಸಂಘಟನೆಯು ನಡೆಸಿದ ಹೋರಾಟಕ್ಕೆ ಮೊದಲ ಹಂತದ ಯಶಸ್ಸು ದೊರೆತಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ “ಶಿಕ್ಷಣ, ಸಂಘಟನೆ, ಹೋರಾಟ” ಎಂಬ ತತ್ವ ಸಿದ್ಧಾಂತಗಳ ಆಧಾರದ ಮೇಲೆ ರಾಜ್ಯಾಧ್ಯಕ್ಷ ಹನುಮಂತ ಜಿ. ಯಳಸಂಗಿ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ದಲಿತ ಸೇನೆ ಸಂಘಟನೆಯು, ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಅಕ್ರಮ ಡೊನೇಷನ್ ದಂಧೆ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಹೋರಾಟದ ಎಚ್ಚರಿಕೆ ನೀಡಿತ್ತು.

ದಲಿತ ಸೇನೆಯ ಮನವಿಗೆ ಸ್ಪಂದಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಬಿ. ನಟೇಶ್ ಅವರು ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ, ಸರ್ಕಾರದ ಸುತ್ತೋಲೆಗಳ ಪ್ರಕಾರ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವಂತೆ ಹಾಗೂ ಮೂರು ದಿನಗಳ ಒಳಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಶೋಷಣೆಯನ್ನು ತಡೆಯಲು ಅಧಿಕಾರಿಗಳು ತಕ್ಷಣ ಸ್ಪಂದಿಸಿರುವುದು ಶ್ಲಾಘನೀಯ ಬೆಳವಣಿಗೆಯಾಗಿದ್ದು, ಈ ಕ್ರಮದಿಂದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನೆರವಾಗಲಿದೆ ಎಂದು ದಲಿತ ಸೇನೆ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಮನವಿಗೆ ತ್ವರಿತವಾಗಿ ಸ್ಪಂದಿಸಿ ಕ್ರಮ ಕೈಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಬಿ. ನಟೇಶ್ ಅವರಿಗೆ ದಲಿತ ಸೇನೆ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಉಡಚಪ್ಪ ಶ್ರೀರಾಮನಗರ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಗಿದೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!