July 16, 2026

“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”

🟥 ಟಿ ಪಬ್ಲಿಕ್ ನ್ಯೂಸ್ | ಕನಕಗಿರಿ
ದಿನಾಂಕ: 16/07/2026

ಕನಕಗಿರಿ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮುರಾರ್ಜಿ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ, ಕೊಪ್ಪಳ ಜಿಲ್ಲಾ ವಿದ್ಯಾರ್ಥಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಗೌಡ ತೀವ್ರವಾಗಿ ಖಂಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಆರಂಭಿಸಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಇಂತಹ ದೌರ್ಜನ್ಯ ಮತ್ತು ಅವ್ಯವಸ್ಥೆ ನಡೆಯುವುದು ಅತ್ಯಂತ ಖಂಡನೀಯ. ಇಂತಹ ಘಟನೆಗಳು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿ, ಶಿಕ್ಷಣದಿಂದಲೇ ದೂರ ಉಳಿಯುವ ಪರಿಸ್ಥಿತಿ ನಿರ್ಮಾಣ ಮಾಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಸಮಾಜ ಕಲ್ಯಾಣ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಿ, ಇಲಾಖಾ ತನಿಖೆ ನಡೆಸಿ ಕಠಿಣ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶಾಲೆಯ ಎದುರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಮುಂದೆ ಬೃಹತ್ ಘೇರಾವ್ ಹಾಗೂ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದರು

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News

About The Author

error: Content is protected !!