October 16, 2026

ಸೋನಂ ವಾಂಗ್ಚುಕ್ ಬಂಧನ ಖಂಡನೆ, ನೀಟ್ ಹಗರಣ ವಿರೋಧಿಸಿ ಎಸ್‌ಎಫ್‌ಐ ಪ್ರತಿಭಟನೆ – ಎನ್‌ಟಿಎ ರದ್ದು, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 24/07/2026

ಗಂಗಾವತಿ: ದೆಹಲಿ ಜಂತರ್ ಮಂತರ್‌ನಲ್ಲಿ ಸಮಾಜಸೇವಕ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಬಂಧಿಸಿರುವುದನ್ನು ಖಂಡಿಸಿ ಹಾಗೂ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಎನ್‌ಟಿಎ ಸಂಸ್ಥೆಯ ವೈಫಲ್ಯ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಗಂಗಾವತಿ ತಾಲೂಕು ಸಮಿತಿ ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳಿಗೆ ಉದ್ದೇಶಿಸಿದ ಮನವಿಯನ್ನು ತಹಸೀಲ್ದಾರರ ಮೂಲಕ ಸಲ್ಲಿಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ವಿದ್ಯಾರ್ಥಿಗಳ ಪಾಲಕರಾದ ನಿರುಪಾದಿ ಬೆಣಕಲ್, ನೀಟ್ ಯುಜಿ–2026 ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದು, ಮರುಪರೀಕ್ಷೆಯಿಂದ ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿದೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಎನ್‌ಟಿಎ ಸಂಸ್ಥೆಯನ್ನು ರದ್ದುಪಡಿಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಎಂದು ಒತ್ತಾಯಿಸಿದರು.

ಕೂಲಿಕಾರರ ಸಂಘ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಜಂಟಿ ಕಾರ್ಯದರ್ಶಿ ಮಾತನಾಡಿ, ಎನ್‌ಟಿಎ ಆರಂಭದಿಂದಲೂ ಪರೀಕ್ಷೆಗಳ ನಿರ್ವಹಣೆಯಲ್ಲಿ ವಿಫಲವಾಗುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಮರುಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ, ಸಂಸ್ಥೆಯನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ನಾಗರಾಜ್ ಯು ಮಾತನಾಡಿ, ಕಳೆದ ಇಪ್ಪತ್ತು ದಿನಗಳಿಂದ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಮತ್ತು ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ದಾಳಿ ಎಂದು ಖಂಡಿಸಿದರು. ಶಾಂತಿಯುತ ಪ್ರತಿಭಟನೆಗಳನ್ನು ಬಲಪ್ರಯೋಗದಿಂದ ಹತ್ತಿಕ್ಕುವ ಬದಲು ಸರ್ಕಾರ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎನ್‌ಟಿಎ ರದ್ದುಪಡಿಸುವುದು, ನೀಟ್ ಹಗರಣಕ್ಕೆ ನ್ಯಾಯಾಂಗ ತನಿಖೆ ನಡೆಸುವುದು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವುದು ಹಾಗೂ ಪ್ರಧಾನಮಂತ್ರಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂಬ ಬೇಡಿಕೆಗಳನ್ನು ಮುಂದಿರಿಸಲಾಯಿತು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಉಪಾಧ್ಯಕ್ಷ ಶರೀಫ್ ಎಂ.ಪಿ., ಜಂಟಿ ಕಾರ್ಯದರ್ಶಿ ದರ್ಶನ್ ಹೋಸ್ಕೇರ, ವಿದ್ಯಾರ್ಥಿಗಳ ಪಾಲಕರಾದ ಲಕ್ಷ್ಮೀದೇವಿ ಸೋನಾರ್, ಹುಸೇನಪ್ಪ ಕೆ., ಮುತ್ತಣ್ಣ, ಮುತ್ತಣ್ಣ ದಾಸನಾಳ, ದುರುಗಮ್ಮ ಹೊಸಕೇರಾ, ಶ್ರೀನಿವಾಸ ಹೊಸಳ್ಳಿ, ಗಂಗಾಧರ ಹೊಸಕೇರಾ, ಎ. ರಮೇಶ್, ಕೃಷ್ಣಪ್ಪ ನಾಯಕ, ಮಹೇಬೂಬ ಮಿರ್ಚಿ ಸೇರಿದಂತೆ ವಿದ್ಯಾರ್ಥಿಗಳಾದ ದರ್ಶನ್, ಶಿವಪ್ಪ, ಮಾರುತಿ, ಫಕೀರಪ್ಪ, ರಮೇಶ್, ಶಿವು, ರೇಷ್ಮಾ, ಪಲ್ಲವಿ, ಸುಷ್ಮಾ, ಶಾಂತ, ಗೌರಮ್ಮ ಹಾಗೂ ಇತರರು ಭಾಗವಹಿಸಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!