🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 12/08/2026
ಜನರಿಗೆ ಪಾಠ ಹೇಳುವವರೇ ಪ್ಲಾಸ್ಟಿಕ್ ಬಳಕೆ: ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿ ಆಕ್ರೋಶ
ಅಧಿಕಾರಿಗಳೇ ಪ್ಲಾಸ್ಟಿಕ್ ಬಳಕೆ ಮಾಡಿದರೆ ಸಾರ್ವಜನಿಕರಿಗೆ ಯಾವ ಸಂದೇಶ?
ಗಂಗಾವತಿ: ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಬಳಕೆ ನಿಯಂತ್ರಣದ ಕುರಿತು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದ್ದರೂ, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೇ ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ಬಾಟಲಿ ಬಳಸುತ್ತಿರುವುದು ಖಂಡನೀಯ ಎಂದು ಪರಿಸರ ಪ್ರೇಮಿ ಹಾಗೂ ವಿದ್ಯಾರ್ಥಿನಿ ಸಿಂಧೂ ದೇವೇಂದ್ರ ಆನೆಗೊಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನಿರಾಬಾದ್ ಕಾಡಾ ಕಚೇರಿಯಲ್ಲಿ ನಡೆದ ಐಸಿಸಿ ಸಭೆಯಲ್ಲಿ ಅಧಿಕಾರಿಗಳು, ಸಚಿವರು ಹಾಗೂ ಶಾಸಕರು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿರುವುದು ಪರಿಸರ ಕಾಳಜಿಯ ಬಗ್ಗೆಯೇ ಗಂಭೀರ ಪ್ರಶ್ನೆ ಮೂಡಿಸಿದೆ ಎಂದರು.
ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಹಾನಿಕಾರಕ ಎಂಬ ಅರಿವು ಇದ್ದರೂ ಸಾರ್ವಜನಿಕ ಸಭೆಗಳಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿದರೆ, ಸಾಮಾನ್ಯ ಜನರಿಗೆ ನಿಯಮ ಪಾಲನೆಯ ಸಂದೇಶವನ್ನು ನೀಡುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದರು.
ಅಂಜನಾದ್ರಿ, ಆನೆಗೊಂದಿ ಹಾಗೂ ಹುಲಗಿ ಪ್ರಮುಖ ಪ್ರವಾಸಿ ಮತ್ತು ಧಾರ್ಮಿಕ ತಾಣಗಳಾಗಿದ್ದು, ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಹಾಗೂ ಭಕ್ತರು ಭೇಟಿ ನೀಡುತ್ತಿದ್ದಾರೆ. ಇಂತಹ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚುತ್ತಿರುವುದು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರವಾಸಿ ಮತ್ತು ಧಾರ್ಮಿಕ ತಾಣಗಳನ್ನು ಹಂತ ಹಂತವಾಗಿ ಪ್ಲಾಸ್ಟಿಕ್ ಮುಕ್ತ ಪ್ರದೇಶಗಳನ್ನಾಗಿ ರೂಪಿಸಬೇಕು. ಮೊದಲು ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೇ ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಸಾರ್ವಜನಿಕರಿಗೆ ಮಾದರಿಯಾಗಬೇಕು. ನಿಯಮ ರೂಪಿಸಿ ಅದನ್ನು ತಾವೇ ಉಲ್ಲಂಘಿಸಿದರೆ ಪರಿಸರ ಸಂರಕ್ಷಣೆಯ ಮಾತುಗಳು ಕೇವಲ ವೇದಿಕೆಯ ಭಾಷಣಕ್ಕೆ ಸೀಮಿತವಾಗಲಿವೆ ಎಂದು ಸಿಂಧೂ ದೇವೇಂದ್ರ ಆನೆಗೊಂದಿ ಎಚ್ಚರಿಸಿದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ
ಗಂಗಾವತಿಯಲ್ಲಿ ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಲು ಸಿಪಿಐ ಆಗ್ರಹ
ಗುತ್ತಿಗೆ ಪದ್ಧತಿ ರದ್ದುಪಡಿಸಲು ಒತ್ತಾಯಿಸಿ ಆ.20ರಂದು ಬೆಂಗಳೂರು ಚಲೋ