October 16, 2026

ಭಾರತ ಜೋಡೋ ಯುವ ಸಂಘಗಳ ನೋಂದಣಿ ಮಾಡಿಸಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಮಾಹಿತಿ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 12/08/2026

ಗಂಗಾವತಿ : ಗ್ರಾಮೀಣ ಯುವಕರನ್ನು ಸಮಾಜಮುಖಿ ಚಟುವಟಿಕೆಗಳು ಹಾಗೂ ಗ್ರಾಮಾಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಭಾರತ ಜೋಡೋ ಯುವ ಸಂಘ (BJYS) ರಚನೆ ಮತ್ತು ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ತಿಳಿಸಿದ್ದಾರೆ.

ಭಾರತ ಜೋಡೋ ಯುವ ಸಂಘವು ಗ್ರಾಮೀಣ ಯುವಕರಲ್ಲಿ ನಾಯಕತ್ವದ ಗುಣ, ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಸ್ವಯಂಪ್ರೇರಿತ ಸೇವೆಯನ್ನು ಬೆಳೆಸುವ ಉದ್ದೇಶ ಹೊಂದಿದ್ದು, ಗ್ರಾಮಗಳ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುತ್ತದೆ. 18 ರಿಂದ 35 ವರ್ಷದೊಳಗಿನ ಯುವಕರು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಘಗಳನ್ನು ರಚಿಸಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ನೋಂದಾಯಿತ ಸಂಘಗಳು ಸ್ವಚ್ಛತೆ, ಪರಿಸರ ಸಂರಕ್ಷಣೆ, ವೃಕ್ಷಾರೋಪಣ, ಜಲ ಸಂರಕ್ಷಣೆ, ಆರೋಗ್ಯ ಜಾಗೃತಿ, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಕ್ಷಣ, ಸರ್ಕಾರಿ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಗಳು, ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ವಿಪತ್ತು ನಿರ್ವಹಣೆ ಸೇರಿದಂತೆ ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ದೊರೆಯಲಿದೆ.
ಈ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳು, ಸ್ವಯಂಸೇವಾ ಸಂಘಗಳು ಹಾಗೂ ಯುವ ಮುಖಂಡರು ಸಕ್ರಿಯವಾಗಿ ಸಹಕರಿಸುವಂತೆ ಕೋರಲಾಗಿದೆ.

ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ನೋಂದಾಯಿಸುವ ಗುರಿ ಹೊಂದಲಾಗಿದ್ದು, ಎಲ್ಲಾ ಅರ್ಹ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ. ಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!