🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 19/08/2026
ಗಂಗಾವತಿ: ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಮತ್ತು ವಸತಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಸರ್ಕಾರಿ ಭೂಮಿ ಕಾಯ್ದಿರಿಸಿ ನಿವೇಶನ ಕಲ್ಪಿಸಬೇಕೆಂದು ಒತ್ತಾಯಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಸಮಿತಿ ವತಿಯಿಂದ ಗಂಗಾವತಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ನಗರ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನಕ್ಕಾಗಿ ಕಾಯ್ದಿರಿಸಿ ಅರ್ಹ ಬಡ ಕುಟುಂಬಗಳಿಗೆ ಹಂಚಿಕೆ ಮಾಡಬೇಕು. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳನ್ನು ಪರಿಶೀಲಿಸಿ, ಅಕ್ರಮ ಒತ್ತುವರಿ ತೆರವುಗೊಳಿಸಿ ಬಡವರಿಗೆ ನಿವೇಶನ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅಂಗವಿಕಲರು, ವಿಧವೆಯರು ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಬಾಕಿ ಇರುವ ಮಾಸಿಕ ಪಿಂಚಣಿ ಹಾಗೂ ಇತರ ಸೌಲಭ್ಯಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು.
ಸೆಪ್ಟೆಂಬರ್ 1ರಂದು ಒಂದು ಲಕ್ಷ ಜನರೊಂದಿಗೆ ದೆಹಲಿಗೆ ತೆರಳಿ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಿವೇಶನ ರಹಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಿಪಿಐ ರಾಜ್ಯ ಕಾರ್ಯದರ್ಶಿ ಶಾಮ ಸುಂದರ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಎ. ಹುಲುಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಲ್. ತಿಮ್ಮಣ್ಣ, ಶೇಖಮ್ಮ, ಗಂಗಮ್ಮ, ಲಕ್ಷ್ಮಣ ನಾಯಕ, ಕಂಠಪ್ಪ, ಮಲಯ ಎರಡೋಣಿ, ಮಂಜುನಾಥ, ತಾಯಮ್ಮ, ರಿಜ್ವಾನ್ ಬೇಗಂ, ಫರೀದಾ ಬೇಗಂ, ಶೇಕಪ್ಪ, ಗುಂಡಪ್ಪ, ಮಂಜುನಾಥ, ನೂರಜಹಾನ್ ಬೇಗಂ ಸೇರಿದಂತೆ ಕಾರ್ಯಕರ್ತರು ಹಾಗೂ ನಿವೇಶನ ರಹಿತರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ