🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 08/09/2026
ಗಂಗಾವತಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಬೆಳೆಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ, ಯಲಬುರ್ಗಾ ಹಾಗೂ ಕುಷ್ಟಗಿ ತಾಲೂಕುಗಳನ್ನು ಕೂಡಲೇ ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ರಾಜ್ಯ ರೈತಪರ ಹೋರಾಟ ಸಂಘಟನೆಯ ರಾಜ್ಯಾಧ್ಯಕ್ಷ ದೊಡ್ಡ ಬರಮಣ್ಣ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ವ್ಯಾಪಕ ಬೆಳೆ ಹಾನಿಯಾಗಿದ್ದು, ಅಧಿಕಾರಿಗಳು ಈಗಾಗಲೇ ಬೆಳೆ ಪರಿಶೀಲನೆ ನಡೆಸಿ ಹಾನಿಯ ಪ್ರಮಾಣದ ವರದಿ ನೀಡಿದ್ದಾರೆ. ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 1,90,667 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕುಷ್ಟಗಿ ತಾಲೂಕಿನಲ್ಲಿ 64,100 ಹೆಕ್ಟೇರ್, ಯಲಬುರ್ಗಾ ತಾಲೂಕಿನಲ್ಲಿ 43,145 ಹೆಕ್ಟೇರ್ ಹಾಗೂ ಕೊಪ್ಪಳ ತಾಲೂಕಿನಲ್ಲಿ 28,605 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.
ಮಳೆಯ ಅಭಾವದಿಂದ ಮೆಕ್ಕೆಜೋಳ, ಸಜ್ಜೆ, ಹೆಸರು, ತೊಗರಿ, ಸೂರ್ಯಕಾಂತಿ ಹಾಗೂ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಹೀಗಿದ್ದರೂ ಸರ್ಕಾರ ಈ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಮುಂದಾಗಿಲ್ಲ. ಕೂಡಲೇ ಸರ್ಕಾರ ಮೂರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಪ್ರತಿ ಗ್ರಾಮದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ರೈತರ ಕೃಷಿ ಸಾಲಗಳ ವಸೂಲಾತಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, ಸರ್ಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳ ಕೃಷಿ ಸಾಲಗಳಿಗೆ ಬಡ್ಡಿ ರಿಯಾಯಿತಿ ನೀಡಬೇಕು. ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ದೊಡ್ಡ ಬರಮಣ್ಣ ಒತ್ತಾಯಿಸಿದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ