🟥 ಟಿ ಪಬ್ಲಿಕ್ ನ್ಯೂಸ್ | ಯಲಬುರ್ಗಾ
ದಿನಾಂಕ: 19/09/2026
ಯಲಬುರ್ಗಾ: ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಕೊಪ್ಪಳ, ತಾಲೂಕು ಪಂಚಾಯತ್ ಯಲಬುರ್ಗಾ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ಯಲಬುರ್ಗಾ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಕಾರ್ಯಕ್ರಮ ಸೆ.19ರಂದು ಮಧ್ಯಾಹ್ನ 12.30ಕ್ಕೆ ಯಲಬುರ್ಗಾದ ಬುದ್ಧ–ಬಸವ–ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಗಿ ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ರಾಯರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕುಷ್ಟಗಿ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹನುಮನಗೌಡ ಪಾಟೀಲ್, ಕೊಪ್ಪಳ ಸಂಸದ ರಾಜಶೇಖರ ಬಸವರಾಜ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರಾದ ಶಶೀಲ ಜಿ. ನಮೋಶಿ, ಶರಣಗೌಡ ಆನಂದನಗೌಡ ಪಾಟೀಲ್ ಬಯ್ಯಾಪುರ ಹಾಗೂ ಹೇಮಲತಾ ನಾಯಕ್ ಸೇರಿದಂತೆ ವಿವಿಧ ಗಣ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12.30ರಿಂದ 1.30ರವರೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬಳಿಕ ಪ್ರಾರ್ಥನೆ, ನಾಡಗೀತೆ, ವಂದೇ ಮಾತರಂ, ಸ್ವಾಗತ, ಪುಷ್ಪಾರ್ಚನೆ ಹಾಗೂ ಪ್ರಾಸ್ತಾವಿಕ ನುಡಿ ನಡೆಯಲಿವೆ. ಉದ್ಘಾಟಕರ ನುಡಿ, ವಿಶೇಷ ಉಪನ್ಯಾಸದ ಬಳಿಕ ನಿವೃತ್ತ ಶಿಕ್ಷಕ–ಶಿಕ್ಷಕಿಯರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಗುವುದು.
ಶಿಕ್ಷಕರ ಸೇವೆ, ಶೈಕ್ಷಣಿಕ ಕ್ಷೇತ್ರದ ಮಹತ್ವ ಹಾಗೂ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರದ ಕುರಿತು ಗಣ್ಯರು ಮಾತನಾಡಲಿದ್ದು, ಸನ್ಮಾನಿತ ಶಿಕ್ಷಕರಿಂದಲೂ ಅನಿಸಿಕೆ ಹಂಚಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ. ನಂತರ ಅತಿಥಿಗಳ ಭಾಷಣ, ಅಧ್ಯಕ್ಷೀಯ ಭಾಷಣ ಹಾಗೂ ವಂದನಾರ್ಪಣೆ ನೆರವೇರಲಿದೆ.
ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬನ್ನಿಗೋಳ, ಸಮನ್ವಯಾಧಿಕಾರಿ ಅಶೋಕ್ ಗೌಡರ್, ಸಹಾಯಕ ನಿರ್ದೇಶಕ (ಅಕ್ಷರ ದಾಸೋಹ) ಟಿ.ಜೆ. ದಾನಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕ ಶರಣಪ್ಪ ವೀರಾಪುರ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ.
ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸುವ ಈ ವಿಶೇಷ ಕಾರ್ಯಕ್ರಮದಲ್ಲಿ ಶಿಕ್ಷಕರು, ನಿವೃತ್ತ ಶಿಕ್ಷಕರು, ಶಿಕ್ಷಣಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ