🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 26/09/2026
ಗಂಗಾವತಿ: ಸ್ವಾಮಿನಾಥನ್ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.29ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ ವೀರೇಶ ಅರಳಹಳ್ಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅವಶ್ಯಕವಾಗಿರುವ ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಸರಿಯಾಗಿ ಮಳೆ ಇಲ್ಲದೆ ಬೆಳೆ ಹಾಳಾಗಿದ್ದು, ರೈತರಿಗೆ ಬರ ಪರಿಹಾರ ನೀಡಬೇಕು, ಅಧಿಕವಾಗಿರುವ ಗೊಬ್ಬರದ ಬೆಲೆ ಇಳಿಕೆ ಮಾಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನಿಗದಿಪಡಿಸುವ ಅಧಿಕಾರವನ್ನು ರೈತರಿಗೆ ನೀಡಬೇಕು. ರೈತರ ಹಿತದೃಷ್ಟಿಯಿಂದ ಸ್ವಾಮಿನಾಥನ್ ವರದಿ ಜಾರಿ ಅತ್ಯಂತ ಅಗತ್ಯವಾಗಿದೆ. ವರದಿ ಜಾರಿಯಾದರೆ ರೈತರ ಸಂಕಷ್ಟಗಳಿಗೆ ಪರಿಹಾರ ದೊರೆಯಲಿದೆ ಎಂದು ಹೇಳಿದರು.
ಸೆ.29ರಂದು ನಡೆಯುವ ಮುತ್ತಿಗೆ ಕಾರ್ಯಕ್ರಮದಲ್ಲಿ ಗಂಗಾವತಿ ತಾಲೂಕಿನ ಪ್ರತಿಯೊಂದು ಗ್ರಾಮದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ರಾಜ್ಯದ ವಿವಿಧ ಜಿಲ್ಲೆಗಳ ರೈತರ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರ ಭಾಗಗಳಿಂದಲೂ ರೈತರು ಆಗಮಿಸಲಿದ್ದು, ಒಂದು ಲಕ್ಷಕ್ಕೂ ಅಧಿಕ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ಅಮರೇಗೌಡ ರೈತರಾದ ವೀರೇಶ, ಕಳಕಪ್ಪ, ಹುಸೇನಪ್ಪ, ವೀರೂಪಾಕ್ಷಿ ಗೋನಾಳ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ