🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 27/09/2026
ಗಂಗಾವತಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಮೂಲಕ ಅನಾವರಣಗೊಳಿಸಲು ಸೂಕ್ತ ವೇದಿಕೆ ಕಲ್ಪಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಐಪಿ ಮೆಲೋಡಿಸ್ನ ಗಾನಕೋಗಿಲೆ ಪ್ರಶಸ್ತಿ ಪುರಸ್ಕೃತ ಪಂಪಾಪತಿ ಇಂಗಳಗಿ ಹೇಳಿದರು.
ನಗರದ ಉಪ್ಪಾರ ಓಣಿಯ ಶ್ರೀ ಗಜಾನನ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಡವರು, ಶ್ರೀಮಂತರು ಎಂಬ ಭೇದವಿಲ್ಲದೆ ಎಲ್ಲ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸಬೇಕು. ನಿರಂತರ ಪ್ರೋತ್ಸಾಹ ನೀಡಿದಾಗ ಮಕ್ಕಳಲ್ಲಿರುವ ಪ್ರತಿಭೆ ಹಾಗೂ ಆತ್ಮವಿಶ್ವಾಸ ಬೆಳೆಯಲು ಸಾಧ್ಯವಾಗುತ್ತದೆ. ಶಾಲಾ-ಕಾಲೇಜುಗಳಲ್ಲಿ ಮಕ್ಕಳನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸುವುದರಿಂದ ಪಠ್ಯೇತರ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. ಮಕ್ಕಳು ಆಟೋಟ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರು ಉತ್ತೇಜಿಸಬೇಕು ಎಂದು ಹೇಳಿದರು.
ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀನಿವಾಸ್ ಮಾತನಾಡಿ, ಪೋಷಕರು ಮಕ್ಕಳ ಪಾಲನೆ-ಪೋಷಣೆಯ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸುವ ಮೂಲಕ ಅವರ ಪ್ರತಿಭೆ ಬೆಳೆಸಬೇಕು ಎಂದು ಸಲಹೆ ನೀಡಿದರು.
ನಂತರ ಸಿಜೆಕೆ ರಂಗ ಪ್ರಶಸ್ತಿ ಪುರಸ್ಕೃತ ನಾಗರಾಜ್ ಇಂಗಳಗಿ ಹಾಗೂ ವಿರುಪಾಕ್ಷಪ್ಪ ಶಿರವಾರ ಅವರು ಪೌರಾಣಿಕ ಸಂಭಾಷಣೆಗಳ ಮೂಲಕ ಗಮನ ಸೆಳೆದರು. ಗಾಯಕ ಪಂಪಾಪತಿ ಇಂಗಳಗಿ ಅವರ ಗಾಯನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ಸಂಘಟಕ ಮುಕ್ಕಣ್ಣ ಮಾನಳ್ಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಯಿತು. ಮುಕ್ಕಣ್ಣ ಮಾನಳ್ಳಿ, ರಾಜಪ್ಪ ಹುಲಿಗಿ, ಮಾಣಿಕ್ಯ ಗೌಳಿ, ಮಂಜುನಾಥ ಬುಕ್ಕಸಾಗರ, ರಾಘವೇಂದ್ರ ಹುಲಿಗಿ, ಮಡಿವಾಳ ಮಂಜುನಾಥ್, ಮೌನೇಶ್ ಇಂಗಳಗಿ, ಚನ್ನಬಸವ, ಮಲ್ಲಪ್ಪ ಹುಲಿಗಿ, ಮೌನೇಶ್ ಮಡಿವಾಳ, ಕೊಟ್ರೇಶ್ಸ್ವಾಮಿ ಚೌಕಿಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಮಾಹಿತಿ ನೀಡದ ಐವರು ಅಧಿಕಾರಿಗಳಿಗೆ ಕಲಬುರಗಿ ಮಾಹಿತಿ ಆಯೋಗದಿಂದ ₹50 ಸಾವಿರ ದಂಡ