October 16, 2026

ಸೌಹಾರ್ದ ಸಹಕಾರಿಗಳ ಬೆಳವಣಿಗೆಗೆ ಆಡಳಿತ ಮಂಡಳಿ-ಸಿಬ್ಬಂದಿ ಸಮನ್ವಯ ಅಗತ್ಯ: ಜಿ. ಶ್ರೀಧರ್

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 30/09/2026

ಗಂಗಾವತಿ : ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಜೋಡಿ ಹಕ್ಕಿಯಂತೆ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಹಕಾರಿ ಸಂಸ್ಥೆಗಳ ಸಮಗ್ರ ಬೆಳವಣಿಗೆ ಸಾಧ್ಯ ಎಂದು ಸಂಯುಕ್ತ ಸಹಕಾರಿಯ ನಿರ್ದೇಶಕ ಜಿ. ಶ್ರೀಧರ್ ಹೇಳಿದರು.

ನಗರದ ಲಲಿತ್ ಮಹಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ನೋಂದಣಿಯಾಗಿರುವ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗಾಗಿ ಆಯೋಜಿಸಿದ್ದ ಪ್ರವೇಶ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಆದರೆ ಸಹಕಾರಿಗಳು ಬೆಳೆಯುತ್ತಿದ್ದಂತೆ ಅವುಗಳ ಜವಾಬ್ದಾರಿಯೂ ಹೆಚ್ಚಾಗುತ್ತದೆ. ಹೀಗಾಗಿ ಆರಂಭದಿಂದಲೇ ಕಾನೂನಿನ ಚೌಕಟ್ಟಿನಲ್ಲಿ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸಿಕೊಂಡು, ಅವುಗಳನ್ನು ಸಮರ್ಪಕವಾಗಿ ಪಾಲಿಸಿಕೊಂಡು ಕಾರ್ಯನಿರ್ವಹಿಸುವುದು ಅಗತ್ಯ ಎಂದು ತಿಳಿಸಿದರು.

ನಂತರ ತರಬೇತಿಯ ಮೊದಲ ಅವಧಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಹಾಗೂ ಲೆಕ್ಕಪರಿಶೋಧನೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಲಾಯಿತು. ಎರಡನೇ ಅವಧಿಯಲ್ಲಿ ಆಡಳಿತ ಮಂಡಳಿಯ ಅಧಿಕಾರಗಳು, ಕರ್ತವ್ಯಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಜವಾಬ್ದಾರಿ ಕುರಿತು ತಿಳಿಸಲಾಯಿತು.

ಕೊಪ್ಪಳ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ನಾಗಲಿಂಗಪ್ಪ ಫತ್ತಾರ, ಜಿಲ್ಲಾ ಒಕ್ಕೂಟದ ನಿರ್ದೇಶಕ ಕುಮಾರೆಪ್ಪ, ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ಓಂಕಾರ , ಸಂಯುಕ್ತ ಸಹಕಾರಿಯ ಸಿಬ್ಬಂದಿಗಳಾದ ಕೋಟೆಪ್ಪ , ಮಂಜುನಾಥ ಹಾಗೂ ಇತರರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!