October 16, 2026

ರೂ.40 ಸಾವಿರ ಲಂಚ ಸ್ವೀಕಾರ: ಗ್ರಾಮ ಆಡಳಿತಾಧಿಕಾರಿ, ಸಹಾಯಕ ಲೋಕಾಯುಕ್ತ ಬಲೆಗೆ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 07/10/2026

ಗಂಗಾವತಿ: ವಿಲ್ ಮೂಲಕ ಬಂದಿದ್ದ ಜಮೀನಿನ ಉತಾರವನ್ನು ವಾರಸುದಾರರ ಹೆಸರಿಗೆ ಮಾಡಿಕೊಡಲು ರೂ.40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದ ಸಂಗಾಪುರದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕನನ್ನು ಕೊಪ್ಪಳ ಲೋಕಾಯುಕ್ತ ಪೊಲೀಸರು ಮಂಗಳವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಸಂಗಾಪುರದ ಗ್ರಾಮ ಆಡಳಿತಾಧಿಕಾರಿ ಸೋಮನಾಥ ಟಿ. ಹಾಗೂ ಗ್ರಾಮ ಸಹಾಯಕ ಹನುಮೇಶ ಬಂಡಿ ಆಂಜನೇಯ ಬಂಧಿತ ಆರೋಪಿಗಳು.

ಗಂಗಾವತಿ ತಾಲೂಕಿನ ಅಂಜನಹಳ್ಳಿ ನಿವಾಸಿ ರಾಮು ತಂದೆ ವೆಂಕಟೇಶ ಅವರಿಗೆ ತಮ್ಮ ಸಣ್ಣಜ್ಜನಿಂದ ವಿಲ್ ಮೂಲಕ ಜಮೀನು ಬಂದಿತ್ತು. ಜಮೀನಿನ ದಾಖಲೆಗಳನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳಲು ಅವರು ಗಂಗಾವತಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಗ್ರಾಮ ಆಡಳಿತಾಧಿಕಾರಿ ಸೋಮನಾಥ ಟಿ. ಹಾಗೂ ಗ್ರಾಮ ಸಹಾಯಕ ಹನುಮೇಶ ಅವರು ರೂ.40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ರಾಮು ಅವರು ಅಕ್ಟೋಬರ್ 5ರಂದು ಕೊಪ್ಪಳ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಅಕ್ಟೋಬರ್ 6ರಂದು ಮಧ್ಯಾಹ್ನ ಸುಮಾರು 12.40ಕ್ಕೆ ಫಿರ್ಯಾದಿದಾರರಿಂದ ರೂ.40 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ದಸ್ತಗಿರಿ ಮಾಡಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ರಾಯಚೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಕೊಪ್ಪಳ ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಸುನೀಲ ಮೇಗಲಮನಿ, ಶೈಲಾ ಎಸ್. ಪ್ಯಾಟಿಶೆಟ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಕೊಪ್ಪಳ ಲೋಕಾಯುಕ್ತ ಕಚೇರಿಯ ಪ್ರಕಟಣೆ ತಿಳಿಸಿದೆ.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!