🟥 ಟಿ ಪಬ್ಲಿಕ್ ನ್ಯೂಸ್ | ಕೊಪ್ಪಳ
ದಿನಾಂಕ: 10/10/2026
ಕೊಪ್ಪಳ: ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿದಾರರಿಗೆ ಸಕಾಲಕ್ಕೆ ಮಾಹಿತಿ ನೀಡದೆ ಹಾಗೂ ಆಯೋಗದ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿದ ಐವರು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠ ತಲಾ ₹10 ಸಾವಿರದಂತೆ ಒಟ್ಟು ₹50 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಅವರು ದ್ವಿತೀಯ ಮೇಲ್ಮನವಿಗಳ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ. ರಾಯಚೂರು ತಾಲೂಕಿನ ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಹಾಗೂ ಮಾಹಿತಿ ನೀಡಿದ ಪ್ರತಿ ಮತ್ತು ಸ್ವೀಕೃತಿ ಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ಈ ಹಿಂದೆ ನೀಡಿದ್ದ ಆದೇಶ ಪಾಲಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಬಸವಕಲ್ಯಾಣ ನಗರಸಭೆಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಸೂರ್ಯಕಾಂತ, ಬೋಳಮಾನದೊಡ್ಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ, ಕಲಬುರಗಿ ಮಹಾನಗರ ಪಾಲಿಕೆಯ ಪರಿಸರ ಅಭಿಯಂತರ ಅಭಯಕುಮಾರ, ಕುಷ್ಟಗಿ ತಾಲೂಕಿನ ಜುಮ್ಮಾಪೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗುರಪ್ಪ ನಾಯಕ ಹಾಗೂ ಹೊಸಪೇಟೆ ತಾಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರವಿಕುಮಾರ ಅವರಿಗೆ ತಲಾ ₹10 ಸಾವಿರ ದಂಡ ವಿಧಿಸಲಾಗಿದೆ.
ಅಧಿಕಾರಿಗಳ ಮುಂದಿನ ತಿಂಗಳ ವೇತನದಲ್ಲಿ ದಂಡದ ಮೊತ್ತ ಕಡಿತಗೊಳಿಸಿ, ಆಯೋಗ ಸೂಚಿಸಿದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಿ ರಶೀದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಅಲ್ಲದೆ, ಆಯೋಗದ ಆದೇಶ ತಲುಪಿದ ತಕ್ಷಣವೇ ಮೇಲ್ಮನವಿದಾರರಿಗೆ ಮಾಹಿತಿ ನೀಡಿ, ಅದರ ಪ್ರತಿ ಮತ್ತು ಸ್ವೀಕೃತಿ ಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ. ಮುಂದಿನ ವಿಚಾರಣೆಗೆ ಹಾಜರಾಗದಿದ್ದಲ್ಲಿ ಮಾಹಿತಿ ಹಕ್ಕು ಅಧಿನಿಯಮದಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳಿಗೂ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ತಪ್ಪಿದಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಆಯೋಗ ಎಚ್ಚರಿಸಿದೆ.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

More Stories
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್
ಉಡಮಕಲ್ ಗ್ರಾಮದಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ