October 14, 2026

ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ನಾಗೇಶ ಪಾಟೀಲ್

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 14/10/2026

ಗಂಗಾವತಿ: ಮಾನಸಿಕ ಆರೋಗ್ಯವು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಪ್ರಮುಖವಾಗಿದ್ದು, ಮಾನಸಿಕ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಗಂಗಾವತಿ ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್ ಹೇಳಿದರು.

ನಗರದ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರಿರೆಯುವ ಮುಖಾಂತರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನಶೈಲಿ ಹಾಗೂ ವಿವಿಧ ಕಾರಣಗಳಿಂದ ಯುವಜನರಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಮಾನಸಿಕ ಸಮಸ್ಯೆಗಳನ್ನು ಮುಚ್ಚಿಡದೆ, ಅಗತ್ಯವಿದ್ದಾಗ ತಜ್ಞರ ಸಲಹೆ ಪಡೆಯಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಕುಟುಂಬದವರು, ಸ್ನೇಹಿತರು ಹಾಗೂ ಶಿಕ್ಷಕರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು. ಉತ್ತಮ ಚಿಂತನೆ, ಆರೋಗ್ಯಕರ ಜೀವನಶೈಲಿ ಹಾಗೂ ಪರಸ್ಪರ ಸಹಕಾರದ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಂತರ ಮಾತನಾಡಿದ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್, ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ದುರ್ಬಲತೆ ಎಂದು ಭಾವಿಸದೆ, ಅವುಗಳ ಬಗ್ಗೆ ಮುಕ್ತವಾಗಿ ಮಾತನಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಯಾವುದೇ ರೀತಿಯ ಒತ್ತಡ, ಆತಂಕ ಅಥವಾ ಸಮಸ್ಯೆ ಎದುರಾದಾಗ ಅದನ್ನು ಮನಸ್ಸಿನಲ್ಲಿಯೇ ಇಟ್ಟುಕೊಳ್ಳದೆ ಪೋಷಕರು, ಶಿಕ್ಷಕರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಯ ತಜ್ಞರಾದ ಡಾ. ಸೋಮಶೇಖರ್ ಮಾತನಾಡಿ, ಒತ್ತಡ, ನಿದ್ರೆಯ ಕೊರತೆ, ಏಕಾಂತ, ನಿರಂತರ ಚಿಂತೆ ಹಾಗೂ ಜೀವನಶೈಲಿಯಲ್ಲಿನ ಬದಲಾವಣೆಗಳು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ವಿದ್ಯಾರ್ಥಿಗಳು ತಮ್ಮಲ್ಲಾಗುವ ಮಾನಸಿಕ ಬದಲಾವಣೆಗಳನ್ನು ನಿರ್ಲಕ್ಷಿಸದೆ, ಆರಂಭದಲ್ಲಿಯೇ ಕುಟುಂಬದವರು, ಶಿಕ್ಷಕರು ಅಥವಾ ತಜ್ಞರೊಂದಿಗೆ ಚರ್ಚಿಸಬೇಕು. ಮಾನಸಿಕ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ಸಲಹೆ ಮತ್ತು ಚಿಕಿತ್ಸೆ ಪಡೆಯುವುದರಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ, ಕಾಲೇಜಿನ ಪ್ರಾಚಾರ್ಯರಾದ ಡಾ. ಶಿವರಾಜ ಗುರಿಕಾರ, ಗಂಗಾವತಿ ತಾಲೂಕು ವೈದ್ಯಾಧಿಕಾರಿ ಡಾ. ಗೌರಿಶಂಕರ್, ಡಾ. ಸಾಯಿ ಸಾತ್ವಿಕ್, ತಾಲೂಕು ಶಿಕ್ಷಣ ಆರೋಗ್ಯಾಧಿಕಾರಿ ಆಶಾ ಬೇಗಂ, ಯಮನೂರು ಭಜೇಂತ್ರಿ ಹಾಗೂ ಉಪವಿಭಾಗ ಆಸ್ಪತ್ರೆಯ ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News
error: Content is protected !!